ರಾಯಚೂರು,ಏ.29(ಕ.ವಾ):- ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಪ್ರಜೆಗೂ ನೀಡಲಾದ ಮತದಾನದ ಹಕ್ಕು,ಅಧಿಕಾರವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಂಡು ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಶಿಧರ ಕುರೇರ ಅವರು ಹೇಳಿದರು.
ಅವರು ಏ.29ರ(ಶನಿವಾರ) ನಗರದ ರೀಮ್ಸ್ ಬೋಧಕ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಮೇ.10ರಂದು ವಿಧಾನಸಭಾ ಚುನಾವಣೆ ನಡೆಯುವುದರಿಂದ ಈಗಾಗಲೇ ಜಿಲ್ಲೆಯಲ್ಲಿ ಮತದಾನವನ್ನು ಪಾರದರ್ಶಕ ಮತ್ತು ವ್ಯವಸ್ಥಿತವಾಗಿ ನಡೆಸಲು ಎಲ್ಲಾ ರೀತಿಯ ಸಿದ್ದತೆಗಳನ್ನು ಕೈಗೊಳ್ಳಲಾಗಿದ್ದು, ಮತಗಟ್ಟೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ನೆರಳಿನ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ ಎಂದರು.
ಚುನಾವಣೆ ಕುರಿತು ಪ್ರತಿಯೊಂದು ಮಾಹಿತಿಯನ್ನು ವೋಟರ್ ಹೆಲ್ಪ್ಲೈನ್ ಆ್ಯಪ್ ಮೂಲಕ ಪಡೆದುಕೊಳ್ಳಬಹುದಾಗಿದ್ದು, ಜೊತೆಗೆ 1950 ಸಹಾಯವಾಣಿಗೆ ಕರೆ ಮಾಡುವ ಮೂಲಕ ಚುನಾವಣೆಗೆ ಸಂಬಂದಿಸಿದಂತೆ ಪ್ರತಿಯೊಂದು ಮಾಹಿತಿ ಹಾಗೂ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಲ್ಳಬಹುದಾಗಿದೆ ಎಂದರು.
ಯಾವುದೇ ಪಕ್ಷದ ಅಭ್ಯರ್ಥಿ ಒತ್ತಡ, ಆಮೀಶ, ಉಡುಗೊರೆಗಳನ್ನು ನೀಡಿ ಮತ ಯಾಚನೆ ಮಾಡುತ್ತಿರುವುದು ಕಂಡುಬಂದಲ್ಲಿ ಕೂಡಲೇ ಸಿ-ವಿಜಿಲ್ ಆ್ಯಪ್ ಮೂಲಕ ದೂರು ಸಲ್ಲಿಸಬಹುದಾಗಿದೆ. ಇದರಿಂದ ಚುನಾವಣಾ ಸಂದರ್ಭಗಳಲ್ಲಿ ಆಗುವಂತಹ ಅಕ್ರಮಗಳನ್ನು ತಡೆಯಬಹುದಾಗಿದೆ ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರವೀಂದ್ರ ಕರಲಿಂಗಣ್ಣವರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಆಶಪ್ಪ, ರೀಮ್ಸ್ ಆಡಳಿತಾಧಿಕಾರಿ ಡಾ.ಹಂಪಣ್ಣ ಸಜ್ಜನ್, ನಗರಸಭೆ ಪೌರಾಯುಕ್ತ ಗುರುಲಿಂಗಪ್ಪ, ಜಿಲ್ಲಾ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಯಂಕಂಚಿ, ರೀಮ್ಸ್ ನಿರ್ದೇಶಕ ಡಾ.ಬಸವರಾಜ ಪೀರಾಪೂರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು