ರಾಯಚೂರು,ಆ.28. ಕಲ್ಯಾಣ ಕರ್ನಾಟಕ ಭಾಗಕ್ಕೆ ಉತ್ತಮ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ಭಾಗಕ್ಕೆ ಅಗತ್ಯಕ್ಕೆ ಅನುಗುಣವಾಗಿ ಹಂತ ಹಂತವಾಗಿ ನೂತನ ಬಸ್ಗಳನ್ನು ಬಿಡುಗಡೆಗೊಳಿಸಲಾಗುವುದು ಮತ್ತು ಈ ಭಾಗದ ಸಾರಿಗೆ ಸಂಸ್ಥೆಗೆ ಶೀಘ್ರವೇ ಹೆಚ್ಚುವರಿ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದರು.
ಜಿಲ್ಲೆಯ ಸಿಂಧನೂರು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ, ಸಿಂಧನೂರಿನಿಂದ ಬೆಂಗಳೂರಿಗೆ ಸಂಚರಿಸಲಿರುವ ನೂತನ ಕಲ್ಯಾಣ ರಥ ಮಲ್ಟಿ ಆಕ್ಸೆಲ್ ಎಸಿ ಸ್ಲೀಪರ್ ಬಸ್ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಬಸ್ಗೆ ಚಾಲನೆ ನೀಡಿ ಮಾತನಾಡಿದರು.
ಪ್ರಸ್ತುತ ಸಾಲಿನಲ್ಲಿ ೭೦೦ ಹೊಸ ಬಸ್ಗಳನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಲಾಗುವುದು, ಸರ್ಕಾರದ ಮಹತ್ತರ ಯೋಜನೆಗಳಲ್ಲೊಂದಾದ ಮತ್ತು ಪ್ರಥಮವಾಗಿ ಜಾರಿಯಾದ ಶಕ್ತಿ ಯೋಜನೆಯಿಂದ ರಾಜ್ಯದಲ್ಲಿ ಸಾರಿಗೆ ಪ್ರಯಾಣಿಕರ ಸಂಖ್ಯೆ ಅತ್ಯಂತ ಹೆಚ್ಚಾದ್ದು, ಮುಂದಿನ ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆಗನುಗುಣವಾಗಿ ಬಸ್ಗಳನ್ನು ನೀಡಲಾಗುವುದು ಎಂದು ತಿಳಿಸಿದರು.
ಸಿಂಧನೂರಿನಿಂದ ಬೆಂಗಳೂರಿಗೆ ತೆರಳುವ ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ನೀಡುವ ಉದ್ದೇಶದಿಂದ ಇಮದು ಕಲ್ಯಾಣ ರಥ ಮಲ್ಟಿ ಆಕ್ಸೆಲ್ ಹವಾನಿಯಂತ್ರಿತ ಸ್ಲೀಪರ್ ಬಸ್ ಅನ್ನು ಲೋಕಾರ್ಪಣೆಗೊಳಿಸಲಾಗಿದ್ದು, ಪ್ರಯಾಣಿಕರು ಈ ಬಸ್ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. .
ಈ ಸಂದರ್ಭದಲ್ಲಿ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ವಿಧಾನ ಪರಿಷತ್ ಸದಸ್ಯ ಶರನೇಗೌಡ ಬಯ್ಯಾಪೂರ, ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ, ಕೆಕೆಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ, ರಾಯಚೂರು ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ, ಕಲಬುರಗಿ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಸಿ.ಇ ಸಂತೋಷ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.