ರಾಯಚೂರು,ಏ.28(ಕ.ವಾ):- ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಸಡಗರದಿಂದ ಆಚರಣೆ ಮಾಡಬೇಕು ವಿಶೇಷಚೇತನರಿಗಾಗಿ ಮತಗಟ್ಟಗಳಲ್ಲಿ ರ್ಯಾಂಪ್ಗಳ ವ್ಯವಸ್ಥೆಯನ್ನು ಮಾಡಲಾಗಿದ್ದು, ವಿಶೇಷಚೇತನರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಶಶಿಧರ ಕುರೇರ ಅವರು ಹೇಳಿದರು.
ಅವರು ಏ.28ರ(ಶುಕ್ರವಾರ) ನಗರದ ಜಿಲ್ಲಾ ಕ್ರೀಡಾಂಗಣದ ಈಜುಕೊಳದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ, ವಿಧಾನಸಭೆ ಚುನಾವಣೆ-2023ರ ಅಂಗವಾಗಿ ವಿಶೇಷಚೇತನರಿಗಾಗಿ ಮತದಾರರ ಜಾಗೃತಿ ಕಾರ್ಯಕ್ರಮ ಹಾಗೂ ವಿಶೇಷಚೇತನರ ಈಜು ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.
ರಾಜ್ಯದಲ್ಲಿ ಮೊದಲಬಾರಿಗೆ ವಿಶೇಷಚೇತನರಿಗಾಗಿ ಈಜುವ ಸ್ಪರ್ಧೆಯನ್ನು ಏರ್ಪಡಿಸುವ ಮೂಲಕ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅತ್ಯಂತ ಸಂತಸದ ವಿಚಾರವಾಗಿದೆ. ದೇಶದ ಪ್ರತಿಯೊಬ್ಬರಿಗೂ ಮತದಾನದ ಹಕ್ಕನ್ನು, ಅಧಿಕಾರವನ್ನು ನೀಡಲಾಗಿದ್ದು, ವಿಶೇಷವಾಗಿ ವಿಶೇಷಚೇತನರು ಈ ಹಕ್ಕನ್ನು ಚಲಾಯಿಸಲು ಮುಂದಾಗಬೇಕು ಎಂದರು.
ಮತದಾರರ ಪ್ರತಿಜ್ಞಾ ವಿಧಿ ಭೋಧನೆ: ಇದೇ ವೇಳೆ ವಿಶೇಷಚೇತನರಿಗೆ ಮತದಾರರ ಪ್ರತಿಜ್ಞಾವಿಧಿಯನ್ನು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಭೋಧಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಶರಣಪ್ಪ ಪಾಟೀಲ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವೃಷಬೇಂದ್ರಯ್ಯ, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಅಣ್ಣಾರಾವ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಈರೇಶ ನಾಯಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.