ರಾಯಚೂರು,ಮೇ.10 ಮತದಾನವೆಂಬುದು ಪವಿತ್ರವಾದದ್ದು, ಯಾರೂ ಕೂಡ ಯಾವುದೇ ಆಮೀಷ ಒತ್ತಡಕ್ಕೊಳಗಾಗದೇ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ನೀಡಿರುವ ಹಕ್ಕನ್ನು ಚಲಾಯಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಹೇಳಿದರು.
ಮೇ.4ರ (ಗುರುವಾರ) ನಗರದ ಮಹತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ವತಿಯಿಂದ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಕಾರ್ಯಕ್ರಮದಂಗವಾಗಿ ವಸತಿ ನಿಲಯದ ಬಾಲಕಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನುದ್ದೇಶೀಸಿ ಮಾತನಾಡಿದರು.
ಪ್ರತಿಯೊಬ್ಬರು ಮತದಾನ ಮಾಡಬೇಕೆಂಬ ಉದ್ದೇಶದಿಂದ ಸಾರ್ವಜನಿಕರಲ್ಲಿ ಮತದಾನದ ಮಹತ್ವದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಅತ್ಯಂತ ಸಂತಸದ ವಿಚಾರವಾಗಿದೆ ಎಂದರು.
ಮೇ.10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ನಿಮ್ಮ ಕುಟುಂಬದ ಸದಸ್ಯರು, ಸುತ್ತಮುತ್ತಲಿನ ಜನರು ಮತದಾನ ಮಾಡುವಂತೆ ಹಾಗೂ ಯಾವುದೇ ಆಮೀಷಗಳಿಗೆ ಹಾಗೂ ಒತ್ತಡಕ್ಕೊಳಗಾಗದೇ ಪವಿತ್ರವಾದ ಮತವನ್ನು ಚಲಾಯಿಸಲು ಪ್ರೋತ್ಸಾಹಿಸಬೇಕೆಂದು ತಿಳಿಸಿದರು.
ಇದೇ ವೇಳೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಶಶಿಧರ ಕುರೇರ ಮಾತನಾಡಿ, ಯುವಕರೆಂದರೇ ಧೈರ್ಯ, ಶಕ್ತಿ ಹಾಗೂ ದೇಶದ ಭವಿಷ್ಯವನ್ನು ರೂಪಿಸುವ ಕಲಾವಿದರಾಗಿದ್ದು, ಮತದಾನದ ಕುರಿತು ವಿಚಾರಗಳನ್ನು ತಿಳಿದುಕೊಂಡು ಪ್ರಜಾಪ್ರಭುತ್ದ ಹಬ್ಬವೆಂದೇ ಕರೆಯಲ್ಪಡುವ ಮತದಾನದ ಹಬ್ಬವನ್ನು ಆಚರಣೆ ಮಾಡಬೇಕೆಂದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತೆದಾರ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜೇಂದ್ರ ಜಲ್ದಾರ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಯಂಕಂಚಿ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಶರಣಬಸವ, ಶಾಲಾ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆಯ ಉಪನಿರ್ದೇಶಕ ವೃಷಬೇಂದ್ರಯ್ಯ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಈರೇಶ ನಾಯಕ, ಗುಡ್ಡಪ್ಪ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.