ರಾಯಚೂರು: ಜಿಲ್ಲೆಯ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಜಿಲ್ಲೆಯ ಇಬ್ಬರು ಪ್ರಮುಖ ಕಾಂಗ್ರೆಸ್ ನಾಯಕರಿಗೆ ರಾಜ್ಯಮಟ್ಟದ ಮಹತ್ವದ ಜವಾಬ್ದಾರಿಗಳು ಒಲಿದುಬಂದಿವೆ. ಸಿಂಧನೂರು ಕ್ಷೇತ್ರದ ಹಂಪನಗೌಡ ಬಾದರ್ಲಿ ಅವರಿಗೆ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನ ನೀಡುವ ಪ್ರಸ್ತಾವನೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಅನುಮೋದನೆ ನೀಡಿದ್ದಾರೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಕೆ.ಸಿ. ವೇಣುಗೋಪಾಲ್ ಅವರು 2026ರ ನವೆಂಬರ್ 20ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಈ ಕುರಿತು ಪತ್ರ ಬರೆದಿದ್ದಾರೆ. ಕರ್ನಾಟಕದ ವಿವಿಧ ಮಂಡಳಿ ಹಾಗೂ ನಿಗಮಗಳಿಗೆ ಒಟ್ಟು 18 ನಾಯಕರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವ ಪ್ರಸ್ತಾವನೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಅನುಮೋದನೆ ನೀಡಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.
ಹಂಪನಗೌಡ ಬಾದರ್ಲಿಗೆ ರಾಜ್ಯ ಉಗ್ರಾಣ ನಿಗಮದ ಹೊಣೆ
ಸಿಂಧನೂರು ಭಾಗದ ಕಾಂಗ್ರೆಸ್ ಮುಖಂಡ ಹಂಪನಗೌಡ ಬಾದರ್ಲಿ ಅವರಿಗೆ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಕೃಷಿ ಪ್ರಧಾನ ಜಿಲ್ಲೆಯಾಗಿರುವ ರಾಯಚೂರು ಭಾಗದಲ್ಲಿ ರೈತರಿಗೆ ಸಂಬಂಧಿಸಿದ ಉಗ್ರಾಣ ವ್ಯವಸ್ಥೆ, ಕೃಷಿ ಉತ್ಪನ್ನಗಳ ಸಂಗ್ರಹಣೆ ಸೇರಿದಂತೆ ಹಲವು ವಿಚಾರಗಳಲ್ಲಿ ರಾಜ್ಯ ಉಗ್ರಾಣ ನಿಗಮ ಮಹತ್ವದ ಪಾತ್ರ ವಹಿಸುತ್ತದೆ. ಇಂತಹ ಪ್ರಮುಖ ನಿಗಮದ ಅಧ್ಯಕ್ಷ ಸ್ಥಾನ ಜಿಲ್ಲೆಯ ನಾಯಕರಿಗೆ ದೊರೆತಿರುವುದು ರಾಜಕೀಯವಾಗಿ ಮಹತ್ವ ಪಡೆದಿದೆ.
ಬಸನಗೌಡ ದದ್ದಲ್‌ಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ
ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಲು ಅನುಮೋದನೆ ದೊರೆತಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಹಾಗೂ ಪ್ರಾದೇಶಿಕ ಅಸಮತೋಲನ ನಿವಾರಣೆಯಂತಹ ಮಹತ್ವದ ಜವಾಬ್ದಾರಿಗಳನ್ನು ಹೊಂದಿರುವ ಮಂಡಳಿಯ ಅಧ್ಯಕ್ಷ ಸ್ಥಾನ ಜಿಲ್ಲೆಗೆ ಮತ್ತೊಂದು ಪ್ರಮುಖ ರಾಜಕೀಯ ಪ್ರಾತಿನಿಧ್ಯ ದೊರೆತಂತಾಗಿದೆ.
18 ನಾಯಕರಿಗೆ ವಿವಿಧ ಜವಾಬ್ದಾರಿಗಳು
ರಾಜ್ಯದ ವಿವಿಧ ಮಂಡಳಿ ಹಾಗೂ ನಿಗಮಗಳಿಗೆ ನೇಮಕಾತಿ ಪ್ರಸ್ತಾವನೆಗೆ ಅನುಮೋದನೆ ದೊರೆತಿದ್ದು, ಬಿ. ಶಿವಣ್ಣ ಅವರಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೆ. ಶಡಕ್ಷರಿ ಅವರಿಗೆ ರಾಜ್ಯ ಖನಿಜ ನಿಗಮ, ಪಿ.ಎಂ. ಅಶೋಕ್ ಅವರಿಗೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಎ.ಆರ್. ಕೃಷ್ಣಮೂರ್ತಿ ಅವರಿಗೆ ಬೆಂಗಳೂರು ಮಹಾನಗರ ಸಾರಿಗೆ ನಿಗಮ, ಡಿ.ಜಿ. ಶಾಂತನಗೌಡ ಅವರಿಗೆ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ ಹಾಗೂ ಜಿ.ಎಚ್. ಶ್ರೀನಿವಾಸ್ ಅವರಿಗೆ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ.


ಇದಲ್ಲದೆ ಮಹಾಂತೇಶ ಕೌಜಲಗಿ ಅವರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ, ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್, ಎನ್.ಎಚ್. ಕೋನರಡ್ಡಿ ಅವರಿಗೆ ಕೃಷಿ ಬೆಲೆ ಆಯೋಗ, ಅಲ್ಲಂಪ್ರಭು ಪಾಟೀಲ್ ಅವರಿಗೆ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ, ಶ್ಯಾಮ್ ನಾಟೇಕರ್ ಅವರಿಗೆ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಹಾಗೂ ಸುಭಾಷ್ ರಾಥೋಡ್ ಅವರಿಗೆ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡುವ ಪ್ರಸ್ತಾವನೆಗೆ ಅನುಮೋದನೆ ದೊರೆತಿದೆ. ಇನ್ನು ಬೆಳೂರು ಗೋಪಾಲಕೃಷ್ಣ ಅವರಿಗೆ ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕ, ತನ್ವೀರ್ ಸೇಠ್ ಅವರಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಮಂಜುನಾಥ ಭಂಡಾರಿ ಅವರಿಗೆ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಹಾಗೂ ಎಚ್.ಸಿ. ಲಲಿತ್ ರಾಘವ್ ಅವರಿಗೆ ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ಜಿಲ್ಲೆಯ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆ
ಒಂದೇ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯ ಇಬ್ಬರು ಪ್ರಮುಖ ನಾಯಕರಿಗೆ ರಾಜ್ಯಮಟ್ಟದ ಮಹತ್ವದ ಜವಾಬ್ದಾರಿಗಳು ದೊರೆತಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ವಿಶೇಷವಾಗಿ ಹಂಪನಗೌಡ ಬಾದರ್ಲಿ ಅವರಿಗೆ ರಾಜ್ಯ ಉಗ್ರಾಣ ನಿಗಮ ಹಾಗೂ ಬಸನಗೌಡ ದದ್ದಲ್ ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಅನುಮೋದನೆ ದೊರೆತಿರುವುದು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದಲೂ ನಿರೀಕ್ಷೆಗಳನ್ನು ಹೆಚ್ಚಿಸಿದೆ, ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೆ.ಸಿ. ವೇಣುಗೋಪಾಲ್ ಪತ್ರ ರವಾನಿಸಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಪತ್ರದ ಪ್ರತಿಯನ್ನು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೂ ಕಳುಹಿಸಲಾಗಿದೆ.












