ರಾಯಚೂರು, ಜು.17: ರಾಯಚೂರು ಜಿಲ್ಲೆಯ ನೂತನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ)ಯಾಗಿ ಡಾ. ನಂದಿತಾ ಎಂ.ಎನ್. ಅವರು ಶುಕ್ರವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿರ್ಗಮಿತ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುರೇಂದ್ರ ಬಾಬು ಅವರಿಂದ ಅಧಿಕಾರವನ್ನು ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಡಾ. ನಂದಿತಾ ಎಂ.ಎನ್., ಜಿಲ್ಲೆಯ ಸಾರ್ವಜನಿಕ ಆರೋಗ್ಯ ಸೇವೆಗಳನ್ನು ಇನ್ನಷ್ಟು ಬಲಪಡಿಸುವುದು ಹಾಗೂ ರಾಜ್ಯ ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ತಮ್ಮ ಪ್ರಮುಖ ಆದ್ಯತೆಯಾಗಲಿದೆ ಎಂದು ತಿಳಿಸಿದರು.
https://www.instagram.com/reel/Da4-Ttuybf6/?igsh=dGRybHN2NmhqaDNt
ಜಿಲ್ಲೆಯ ತಾಯಿ ಮತ್ತು ಶಿಶು ಆರೋಗ್ಯ ಸೇವೆ, ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ, ಸಾಂಕ್ರಾಮಿಕ ರೋಗಗಳ ನಿಯಂತ್ರಣ, ಸಾರ್ವತ್ರಿಕ ಲಸಿಕಾ ಅಭಿಯಾನ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳ ವಿಸ್ತರಣೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದರು. ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸಮನ್ವಯ ಸಾಧಿಸಿ, ಜನಸ್ನೇಹಿ ಮತ್ತು ಪರಿಣಾಮಕಾರಿ ಆರೋಗ್ಯ ಸೇವೆಗಳನ್ನು ಒದಗಿಸಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಇಲಾಖೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ವೈದ್ಯರು ಹಾಗೂ ಸಿಬ್ಬಂದಿ ನೂತನ ಜಿಲ್ಲಾ ಆರೋಗ್ಯಾಧಿಕಾರಿಯನ್ನು ಅಭಿನಂದಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ವಿಭಾಗಗಳ ಅಧಿಕಾರಿಗಳು, ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.













