ನವದೆಹಲಿ: ಕರ್ನಾಟಕ ಲೋಕಸೇವಾ ಆಯೋಗದ (KPSC) 2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. 2011ರಲ್ಲಿ ನಡೆದ ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ, ಅಕ್ರಮ ಹಾಗೂ ಸ್ವಜನಪಕ್ಷಪಾತ ನಡೆದಿರುವುದು ತನಿಖೆಯಲ್ಲಿ ಸಾಬೀತಾಗಿದ್ದ ಹಿನ್ನೆಲೆಯಲ್ಲಿ, ಆ ನೇಮಕಾತಿಯನ್ನು ರದ್ದುಗೊಳಿಸಿರುವ ಹಿಂದಿನ ನಿರ್ಧಾರವನ್ನು ಎತ್ತಿಹಿಡಿದಿದೆ. ಅಲ್ಲದೆ, 2022ರಲ್ಲಿ ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ನೇಮಕಾತಿ ಮಾನ್ಯಗೊಳಿಸುವ ಕಾಯ್ದೆಯನ್ನು ಅಸಂವಿಧಾನಿಕ ಎಂದು ಘೋಷಿಸಿದೆ.

2011ರ ನವೆಂಬರ್ 3ರಂದು ಕರ್ನಾಟಕ ಸರ್ಕಾರವು ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ವೃಂದದ ಒಟ್ಟು 362 ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿತ್ತು. ಈ ನೇಮಕಾತಿಗೆ ಒಟ್ಟು 1,38,307 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅವರಲ್ಲಿ 91,667 ಅಭ್ಯರ್ಥಿಗಳು ಪ್ರಾಥಮಿಕ ಪರೀಕ್ಷೆಗೆ ಹಾಜರಾಗಿದ್ದರು. ಪ್ರಾಥಮಿಕ ಪರೀಕ್ಷೆಯಲ್ಲಿ ಅರ್ಹತೆ ಪಡೆದ 6,211 ಅಭ್ಯರ್ಥಿಗಳು ಮುಖ್ಯ ಪರೀಕ್ಷೆ ಬರೆದಿದ್ದರು. ಅಂತಿಮವಾಗಿ 1,090 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗಿತ್ತು.

ಆದರೆ, ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ 2013ರಲ್ಲಿ ಅಂತಿಮ ಆಯ್ಕೆಪಟ್ಟಿ ಪ್ರಕಟಿಸುವುದನ್ನು ಸರ್ಕಾರ ತಡೆಹಿಡಿದು, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ತನಿಖೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಕೆಲವು ಅಧಿಕಾರಿಗಳಿಂದ ಭಾರೀ ಪ್ರಮಾಣದ ಭ್ರಷ್ಟಾಚಾರ, ಸ್ವಜನಪಕ್ಷಪಾತ ಹಾಗೂ ಆಯ್ಕೆ ಪ್ರಕ್ರಿಯೆಯಲ್ಲಿನ ಅಕ್ರಮಗಳು ನಡೆದಿರುವುದು ಬೆಳಕಿಗೆ ಬಂದಿತ್ತು. ಇದರ ಆಧಾರದ ಮೇಲೆ 2014ರಲ್ಲಿ ಸಂಪೂರ್ಣ ನೇಮಕಾತಿಯನ್ನು ರದ್ದುಗೊಳಿಸಲಾಗಿತ್ತು.

ಈ ನಿರ್ಧಾರವನ್ನು ಪ್ರಶ್ನಿಸಿ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (KAT) ಹಾಗೂ ನ್ಯಾಯಾಲಯಗಳ ಮೊರೆ ಹೋಗಿದ್ದರು. ಆದರೆ, ಕರ್ನಾಟಕ ಹೈಕೋರ್ಟ್ ನೇಮಕಾತಿ ರದ್ದತಿಯನ್ನು ಎತ್ತಿಹಿಡಿದಿತ್ತು. ನಂತರ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರೂ, ಸುಪ್ರೀಂ ಕೋರ್ಟ್ ಕೂಡ ನೇಮಕಾತಿ ರದ್ದತಿ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿತ್ತು. ಇದಾದ ಬಳಿಕ, ಸುಮಾರು ಒಂದು ದಶಕದ ನಂತರ 2022ರಲ್ಲಿ ಕರ್ನಾಟಕ ಸರ್ಕಾರವು 2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಆಯ್ಕೆ ಮತ್ತು ನೇಮಕಾತಿಯನ್ನು ಮಾನ್ಯಗೊಳಿಸುವ ಉದ್ದೇಶದಿಂದ ವಿಶೇಷ ಕಾಯ್ದೆಯನ್ನು ಜಾರಿಗೆ ತಂದಿತ್ತು. ಈ ಕಾಯ್ದೆಯನ್ನು ಪ್ರಶ್ನಿಸಿ ಕೆಲವು ಅಭ್ಯರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈಗಾಗಲೇ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ರದ್ದುಗೊಳಿಸಿರುವ ನೇಮಕಾತಿಯನ್ನು ಮತ್ತೊಮ್ಮೆ ಮಾನ್ಯಗೊಳಿಸುವ ಅಧಿಕಾರ ಸರ್ಕಾರದ ಕಾಯ್ದೆಗೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ನ್ಯಾಯಾಲಯದ ಅಂತಿಮ ತೀರ್ಪನ್ನು ನಿಷ್ಪ್ರಯೋಜಕಗೊಳಿಸುವ ಉದ್ದೇಶದಿಂದ ಕಾನೂನು ರೂಪಿಸುವುದು ಸಂವಿಧಾನಬಾಹಿರ ಎಂದು ಅಭಿಪ್ರಾಯಪಟ್ಟಿದೆ. ಹೀಗಾಗಿ 2022ರ ಕಾಯ್ದೆಯನ್ನು ಅಸಂವಿಧಾನಿಕ ಎಂದು ಘೋಷಿಸಿ ರದ್ದುಗೊಳಿಸಿದೆ.
ಖಾಲಿ ಹುದ್ದೆಗಳಿಗೆ ಹೊಸ ನೇಮಕಾತಿ:
ಈ ಪ್ರಕರಣದಲ್ಲಿ ಅಭ್ಯರ್ಥಿಗಳ ವಯಸ್ಸು ಹೆಚ್ಚಾಗಿರುವುದರಿಂದ ಹಾಗೂ ನೇಮಕಾತಿ ಪ್ರಕ್ರಿಯೆ ಆರಂಭವಾಗಿ ಸುಮಾರು 15 ವರ್ಷಗಳು ಕಳೆದಿರುವುದರಿಂದ ಹಳೆಯ ನೇಮಕಾತಿಯನ್ನು ಪುನಃ ಆರಂಭಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಆದ್ದರಿಂದ ಪ್ರಸ್ತುತ ಖಾಲಿ ಇರುವ ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ಹುದ್ದೆಗಳಿಗೆ ಈಗ ಜಾರಿಯಲ್ಲಿರುವ ನೇಮಕಾತಿ ನಿಯಮಗಳ ಪ್ರಕಾರ ಹೊಸ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಇದರೊಂದಿಗೆ ಹಿಂದಿನ ನೇಮಕಾತಿಯಲ್ಲಿ ಆಯ್ಕೆಯಾಗಿದ್ದರೂ ಸಿಐಡಿ ತನಿಖೆಯಲ್ಲಿ ಕಳಂಕಿತರಲ್ಲ ಎಂದು ಕಂಡುಬಂದ ಅಭ್ಯರ್ಥಿಗಳಿಗೆ, ಈ ಪ್ರಕರಣದಲ್ಲಿ ಹೋರಾಟ ನಡೆಸಿದ ಆರು ಅರ್ಜಿದಾರರಿಗೆ ಹಾಗೂ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ ಪ್ರಕರಣ ಬಾಕಿ ಇರುವ ಅರ್ಜಿದಾರರಿಗೆ ಒಂದು ಬಾರಿಯ ವಿಶೇಷ ಅವಕಾಶವಾಗಿ ವಯೋಮಿತಿ ಸಡಿಲಿಕೆ ನೀಡುವಂತೆ ಆದೇಶಿಸಿದೆ. ಇವರು ಹೊಸ ನೇಮಕಾತಿಯಲ್ಲಿ ಇತರ ಅರ್ಹ ಅಭ್ಯರ್ಥಿಗಳೊಂದಿಗೆ ಸ್ಪರ್ಧಿಸಬಹುದಾಗಿದೆ.
ಹಳೆಯ ಸೇವೆಗೆ ಸಂಬಂಧಿಸಿದಂತೆ ಮಹತ್ವದ ಸ್ಪಷ್ಟನೆ:
ಹೊಸ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹಿಂದಿನ ದಿನಾಂಕದಿಂದ ಸೇವಾ ಹಿರಿತನ ಅಥವಾ ಹಿಂದಿನ ಅವಧಿಯ ವೇತನ ಸೌಲಭ್ಯ ದೊರೆಯುವುದಿಲ್ಲ. ಅವರ ಸೇವಾ ಹಿರಿತನವು ಹೊಸದಾಗಿ ನೇಮಕಗೊಂಡ ದಿನಾಂಕದಿಂದ ಮಾತ್ರ ಪರಿಗಣಿಸಲ್ಪಡುತ್ತದೆ. ಆದರೆ, ಈಗಾಗಲೇ ಸೇವೆಯಲ್ಲಿದ್ದು ಹೊಸ ನೇಮಕಾತಿಯಲ್ಲಿ ಪುನಃ ಆಯ್ಕೆಯಾಗಿ ನೇಮಕಗೊಳ್ಳುವ ಅಭ್ಯರ್ಥಿಗಳ ಹಿಂದಿನ ಸೇವಾವಧಿಯನ್ನು ಪಿಂಚಣಿ ಮತ್ತು ನಿವೃತ್ತಿ ಸೌಲಭ್ಯಗಳ ಲೆಕ್ಕಾಚಾರಕ್ಕೆ ಪರಿಗಣಿಸಲಾಗುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠವು 2026ರ ಅಕ್ಟೋಬರ್ 29ರಂದು ಪ್ರಕಟಿಸಿದೆ. ಒಟ್ಟಿನಲ್ಲಿ, ದೀರ್ಘಕಾಲದಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಅಭ್ಯರ್ಥಿಗಳಿಗೆ ಸುಪ್ರೀಂ ಕೋರ್ಟ್ ಒಂದು ಬಾರಿ ಹೊಸ ಅವಕಾಶ ಕಲ್ಪಿಸಿದ್ದು, ಸರ್ಕಾರಿ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಪ್ರಾಮಾಣಿಕತೆ ಮತ್ತು ನ್ಯಾಯಸಮ್ಮತತೆ ಅತ್ಯಗತ್ಯ ಎಂಬ ಮಹತ್ವದ ಸಂದೇಶವನ್ನು ಈ ತೀರ್ಪು ನೀಡಿದೆ.












