ಸಿಂಧನೂರು: ತುಂಗಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ರೈತರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ನೀರಾವರಿ ಸಮಸ್ಯೆಗಳನ್ನು ಸರಿಪಡಿಸುವ ಉದ್ದೇಶದಿಂದ ಅ.7ರಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಮುನಿರಾಬಾದ್‌ನಲ್ಲಿ ಸಭೆ ಕರೆಯಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಸಿಂಧನೂರು ತಾಲೂಕಿನ ರೈತರಿಗೆ ನಿರಂತರವಾಗಿ ನೀರು ಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
https://youtu.be/DJeUE4jCb8Q?si=L3AcjRj3iHWD6xsA
ತುಂಗಭದ್ರಾ ಎಡದಂಡೆ ಕಾಲುವೆಯ ಸಿಂಧನೂರು 36ನೇ ಉಪಕಾಲುವೆಗೆ ವಾರಬಂದಿ ಪದ್ಧತಿ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿ, ನಿರಂತರವಾಗಿ ನೀರು ಹರಿಸುವಂತೆ ಮುಖ್ಯಮಂತ್ರಿ ಅವರೊಂದಿಗೆ ದೂರವಾಣಿ ಮೂಲಕ ಚರ್ಚಿಸಲಾಗಿದೆ. ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳಿಗೂ ಅಗತ್ಯ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವರು, ನೀರಾವರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಬಳಿಕ 36ನೇ ಉಪಕಾಲುವೆಯ ಗೇಟ್‌ಗಳನ್ನು ತೆರೆಯಲಾಗಿದೆ. ರೈತರ ಜಮೀನುಗಳಿಗೆ ನೀರು ಹರಿಯುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಬಸನಗೌಡ ಬಾದರ್ಲಿ ಹೇಳಿದ್ದಾರೆ.
https://youtu.be/7C_D9vzk9uk?si=KQGJi1DR9szqiqwo
ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ನೀರಿನ ಸಮಸ್ಯೆಯನ್ನು ಸಂಪೂರ್ಣವಾಗಿ ಇತ್ಯರ್ಥಪಡಿಸುವ ಕುರಿತು ಅ.7ರಂದು ಸಂಜೆ 4 ಗಂಟೆಗೆ ಮುನಿರಾಬಾದ್‌ನಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಈ ಭಾಗದ ರೈತರ ಹಿತಾಸಕ್ತಿಗೆ ಅನುಗುಣವಾಗಿ ಅಗತ್ಯ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸಿಂಧನೂರು ತಾಲೂಕಿನ ರೈತರಿಗೆ ಸಮರ್ಪಕವಾಗಿ ನೀರು ಒದಗಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ. ರೈತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ನೀರಾವರಿ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಬಸನಗೌಡ ಬಾದರ್ಲಿ ಭರವಸೆ ನೀಡಿದ್ದಾರೆ.













