ರಾಯಚೂರು, ಜುಲೈ 4: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು ಶನಿವಾರ ಗ್ರಾಮೀಣ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಶಿಕ್ಷಣ, ರಸ್ತೆ, ಸೇತುವೆ, ಕೃಷಿ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಯೋಜನೆಗಳ ಕುರಿತು ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
ವಿದ್ಯಾರ್ಥಿಗಳಿಗಾಗಿ ನೂತನ ಬಸ್‌ಗೆ ಚಾಲನೆ
ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಶಾಸಕರ ಕಚೇರಿಯಿಂದ ಪ್ರವಾಸ ಆರಂಭಿಸಿದ ಅವರು, ಚಂದ್ರಬಂಡ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಡಗಂದೊಡ್ಡಿ ಗ್ರಾಮದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನೂತನ ಬಸ್ ಸೇವೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಬಸ್ ಸೌಲಭ್ಯವನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉನ್ನತ ಸ್ಥಾನಮಾನ ಗಳಿಸಬೇಕು. ತಂದೆ-ತಾಯಿಗೆ ಕೀರ್ತಿ ತರುವಂತೆ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
ವಸತಿ ನಿಲಯ ಪರಿಶೀಲನೆ
ಬಳಿಕ ಚಂದ್ರಬಂಡದ ಡಿ. ದೇವರಾಜ ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ವಸತಿ ನಿಲಯದ ಊಟ, ಕುಡಿಯುವ ನೀರು, ಅಡುಗೆಮನೆ, ತರಕಾರಿ, ರೇಷನ್ ಹಾಗೂ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದ ಅವರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡಬೇಕು ಹಾಗೂ ಮೆನು ಪ್ರಕಾರವೇ ಆಹಾರ ಸಿದ್ಧಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅಲ್ಲದೆ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಅಕ್ಷರ ಪಾತ್ರ ಪುಸ್ತಕಾಲಯವನ್ನು ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ಅಗತ್ಯ ಪುಸ್ತಕಗಳನ್ನು ಒದಗಿಸುವಂತೆ ತಿಳಿಸಿದರು.

ನೂತನ ರೈತ ಸಂಪರ್ಕ ಕೇಂದ್ರಕ್ಕೆ ಸಿದ್ಧತೆ
ಚಂದ್ರಬಂಡದಲ್ಲಿ ರೈತರಿಗೆ ಅನುಕೂಲವಾಗುವಂತೆ ನೂತನ ರೈತ ಸಂಪರ್ಕ ಕೇಂದ್ರ ನಿರ್ಮಾಣಕ್ಕಾಗಿ ಜಾಗ ಗುರುತಿಸಲಾಗಿದ್ದು, ಭೂಸಮೀಕ್ಷೆ ಪೂರ್ಣಗೊಂಡ ತಕ್ಷಣ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಶಾಸಕರು ತಿಳಿಸಿದರು.
₹14 ಕೋಟಿ ವೆಚ್ಚದ ರಸ್ತೆ ನಿರ್ಮಾಣ
ಕಟ್ಟಲಪೂರ ಕ್ರಾಸ್‌ನಿಂದ ತೆಲಂಗಾಣ ಗಡಿವರೆಗಿನ ಸುಮಾರು 30 ಕಿಲೋಮೀಟರ್ ರಸ್ತೆ ಕಾಮಗಾರಿಯನ್ನು ₹14 ಕೋಟಿ ವೆಚ್ಚದಲ್ಲಿ ಗುಣಮಟ್ಟದ ರೀತಿಯಲ್ಲಿ ನಿರ್ಮಿಸಲಾಗಿದೆ ಎಂದು ಶಾಸಕರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಸೇತುವೆ ಕಾಮಗಾರಿಗಳ ಪರಿಶೀಲನೆ
ನಂತರ ಡಿ. ರಾಂಪೂರ ಸಂಪರ್ಕಿಸುವ ಕೃಷ್ಣಾ ನದಿಯ ಸೇತುವೆ ಕಾಮಗಾರಿ ಹಾಗೂ ಕುರ್ವಕಲಾ ಸೇತುವೆ ಕಾಮಗಾರಿಗಳನ್ನು ವೀಕ್ಷಿಸಿದ ಅವರು, ಉಳಿದಿರುವ ಸಣ್ಣಪುಟ್ಟ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಮುಕ್ತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು
ಕುರ್ವಕಲಾ ಸೇತುವೆ ಬಳಿ ಮಾತನಾಡಿದ ಶಾಸಕರು, ನಾರದಗಡ್ಡೆಯನ್ನು ಪ್ರಮುಖ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ಜಿಲ್ಲಾಡಳಿತದೊಂದಿಗೆ ಯೋಜನೆ ರೂಪಿಸಲಾಗಿದೆ ಎಂದರು.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ತೆಲಂಗಾಣದಿಂದ ಸಾವಿರಾರು ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಇದೇ ಭಾಗದಲ್ಲಿ ಮೊಸಳೆ ಪಾರ್ಕ್ ನಿರ್ಮಾಣ, ಭಕ್ತರಿಗೆ ಅಗತ್ಯ ಸೌಲಭ್ಯ ಹಾಗೂ ಕೃಷ್ಣಾ ನದಿಗೆ ಸಣ್ಣ ಅಣೆಕಟ್ಟು ನಿರ್ಮಿಸುವ ಮೂಲಕ ರೈತರಿಗೆ ಕೃಷಿ ಚಟುವಟಿಕೆಗೆ ಅನುಕೂಲ ಕಲ್ಪಿಸುವ ಯೋಜನೆಯೂ ಇದೆ ಎಂದು ತಿಳಿಸಿದರು.



ರೈತರಿಗೆ ಬೆಳೆ ವಿಮೆ ಮಾಡಿಸಿಕೊಳ್ಳುವಂತೆ ಮನವಿ
ಮಳೆ ಕೊರತೆಯ ಪರಿಸ್ಥಿತಿ ಎದುರಾದರೆ ರಾಜ್ಯ ಸರ್ಕಾರದಿಂದ ಬರ ಪರಿಹಾರ ಘೋಷಿಸುವ ಸಾಧ್ಯತೆ ಇದೆ. ಆದ್ದರಿಂದ ಪ್ರತಿಯೊಬ್ಬ ರೈತರೂ ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು. ಬೆಳೆ ನಷ್ಟವಾದಲ್ಲಿ ವಿಮಾ ಕಂಪನಿಯಿಂದ ಪರಿಹಾರ ಪಡೆಯಲು ಇದು ಸಹಕಾರಿಯಾಗಲಿದೆ ಎಂದು ಶಾಸಕ ಬಸನಗೌಡ ದದ್ದಲ್ ಹೇಳಿದರು.
ಕುರುವಾಪುರದಲ್ಲಿ ದರ್ಶನ
ಪ್ರವಾಸದ ಅಂತ್ಯದಲ್ಲಿ ಕುರುವಾಪುರದ ಶ್ರೀಪಾದ ವಲ್ಲಭ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅವರು, ಕೃಷ್ಣಾ ನದಿಯ ಸ್ನಾನಘಟ್ಟ ಕಾಮಗಾರಿಯನ್ನೂ ಪರಿಶೀಲಿಸಿದರು.
ಅಧಿಕಾರಿಗಳ ಉಪಸ್ಥಿತಿ
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ಮಟ್ಟದ ಸಮಿತಿಯ ಉಪಾಧ್ಯಕ್ಷ ನಾಗೇಂದ್ರ ಮಟಮಾರಿ, ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜಿ. ಸುರೇಶ್, ಪಿಡಬ್ಲ್ಯೂಡಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಆನಂದ, ಮಹೇಶ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ದೀಪಾ ಕುಲಕರ್ಣಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.














