ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಚಾಲನೆ – ರೈತರು ಬೆಳೆ ವಿಮೆ ಸೌಲಭ್ಯ ಸದುಪಯೋಗಪಡಿಸಿಕೊಳ್ಳುವಂತೆ ಕರೆ
ರಾಯಚೂರು, ಜುಲೈ 4: ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೆಳೆ ವಿಮೆ ಯೋಜನೆ ಮತ್ತು ರಸಗೊಬ್ಬರ ದರಗಳ ಕುರಿತು ಸಮಗ್ರ ಮಾಹಿತಿ ತಲುಪಿಸುವ ಉದ್ದೇಶದಿಂದ ಕೃಷಿ ಇಲಾಖೆ ಸಿದ್ಧಪಡಿಸಿರುವ ಪ್ರಧಾನ ಮಂತ್ರಿ ಫಸಲ ಬಿಮಾ (ಬೆಳೆ ವಿಮೆ) ಯೋಜನೆ ಹಾಗೂ ವಿವಿಧ ರಸಗೊಬ್ಬರಗಳ ದರಪಟ್ಟಿ ಕುರಿತ ಪೋಸ್ಟರ್‌ನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಬಿಡುಗಡೆ ಮಾಡಿದರು.
ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜುಲೈ 3ರಂದು ನಡೆದ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ವತಿಯಿಂದ ಸಿದ್ಧಪಡಿಸಲಾದ ಈ ಪೋಸ್ಟರ್‌ನ್ನು ಅನಾವರಣಗೊಳಿಸಲಾಯಿತು.
ಈ ಪೋಸ್ಟರ್ ಮೂಲಕ ರೈತರಿಗೆ ಪ್ರಧಾನ ಮಂತ್ರಿ ಫಸಲ ಬಿಮಾ ಯೋಜನೆಯಡಿ ಬೆಳೆ ವಿಮೆ ನೋಂದಣಿ, ಯೋಜನೆಯ ಪ್ರಮುಖ ಅಂಶಗಳು ಹಾಗೂ ವಿವಿಧ ರಸಗೊಬ್ಬರಗಳ ಅಧಿಕೃತ ದರಗಳ ಕುರಿತು ಮಾಹಿತಿ ನೀಡಲಾಗಿದ್ದು, ರೈತರು ಸರ್ಕಾರದ ಯೋಜನೆಗಳ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಚಿವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಹಾಗೂ ಮಸ್ಕಿ ಕ್ಷೇತ್ರದ ಶಾಸಕರಾದ ಆರ್. ಬಸನಗೌಡ ತುರ್ವಿಹಾಳ, ರಾಯಚೂರು ಲೋಕಸಭಾ ಸದಸ್ಯರಾದ ಜಿ. ಕುಮಾರ ನಾಯಕ, ಮಾನವಿ ಕ್ಷೇತ್ರದ ಶಾಸಕರಾದ ಜಿ. ಹಂಪಯ್ಯ, ವಿಧಾನ ಪರಿಷತ್ ಸದಸ್ಯರಾದ ಎ. ವಸಂತಕುಮಾರ ಹಾಗೂ ಬಸನಗೌಡ ಬಾದರ್ಲಿ ಉಪಸ್ಥಿತರಿದ್ದರು.
ಇದೇ ವೇಳೆ ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ರಾಯಚೂರು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ, ಅಪರ ಜಿಲ್ಲಾಧಿಕಾರಿ ಶಿವಾನಂದ, ಸಹಾಯಕ ಆಯುಕ್ತ ಡಾ. ಹಂಪಣ್ಣ ಸಜ್ಜನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ ಹಾಗೂ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ್ ಚೌವಾಣ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
ಕೃಷಿ ಇಲಾಖೆ ರೈತರಿಗೆ ಬೆಳೆ ವಿಮೆ ಹಾಗೂ ಕೃಷಿ ಸಂಬಂಧಿತ ಮಾಹಿತಿಯನ್ನು ಸುಲಭವಾಗಿ ತಲುಪಿಸಲು ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಮುಂದುವರಿಸಲಿದ್ದು, ರೈತರು ಯೋಜನೆಗಳ ಕುರಿತು ಸಂಪೂರ್ಣ ಮಾಹಿತಿ ಪಡೆದು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.













