ರಾಯಚೂರು, ಜೂನ್ 19: ಮಕ್ಕಳ ಹಕ್ಕುಗಳ ರಕ್ಷಣೆ, ಅಪೌಷ್ಟಿಕತೆ ತಡೆ ಹಾಗೂ ಮಕ್ಕಳ ಕಲ್ಯಾಣ ಸೇವೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಸತ್ಯ ನಾರಾಯಣ ಶೆಟ್ಟಿ ಅವರು ಜೂನ್ 18ರಂದು ರಾಯಚೂರಿನ ವಿವಿಧ ಮಕ್ಕಳ ಕಲ್ಯಾಣ ಹಾಗೂ ಆರೋಗ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೊದಲಿಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಪೌಷ್ಟಿಕ ಮಕ್ಕಳ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿದರು. ಅಲ್ಲದೆ ಮಕ್ಕಳ ಪಾಲಕರೊಂದಿಗೆ ಸಮಾಲೋಚನೆ ನಡೆಸಿ, ಮಕ್ಕಳ ಆರೋಗ್ಯ, ಪೌಷ್ಟಿಕ ಆಹಾರ ಹಾಗೂ ಚಿಕಿತ್ಸೆ ಕುರಿತಂತೆ ಮಾಹಿತಿ ಪಡೆದುಕೊಂಡರು. ಮಕ್ಕಳ ಆರೋಗ್ಯ ಸುಧಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಲಹೆ ನೀಡಿದರು.

ನಂತರ ರಿಮ್ಸ್ ಆಸ್ಪತ್ರೆ ಆವರಣದಲ್ಲಿರುವ ಸಖಿ ಒನ್ ಸ್ಟಾಪ್ ಸೆಂಟರ್ಗೆ ಭೇಟಿ ನೀಡಿ, ಮಹಿಳೆಯರು ಹಾಗೂ ಮಕ್ಕಳಿಗೆ ನೀಡಲಾಗುತ್ತಿರುವ ಸೇವೆಗಳ ಕುರಿತು ಮಾಹಿತಿ ಪಡೆದರು. ಮಕ್ಕಳಿಗೆ ಸಂಬಂಧಿಸಿದ ಪ್ರಕರಣಗಳ ನಿರ್ವಹಣೆ, ದೌರ್ಜನ್ಯ ತಡೆ, ಕಾನೂನು ನೆರವು ಹಾಗೂ ಪುನರ್ವಸತಿ ಕ್ರಮಗಳ ಬಗ್ಗೆ ಸಿಬ್ಬಂದಿಗಳೊಂದಿಗೆ ಚರ್ಚಿಸಿದರು. ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ತ್ವರಿತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಳಿಕ ರಾಯಚೂರಿನ ಆಗಾಫೆ ಚರ್ಚ್ ಸಮೀಪದಲ್ಲಿರುವ ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಭೇಟಿ ನೀಡಿದ ಅವರು ಅಲ್ಲಿನ ಮಕ್ಕಳೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿ ಅವರ ಸಮಸ್ಯೆಗಳು, ಅಗತ್ಯತೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು. ನಂತರ ಸಂಸ್ಥೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಆರೋಗ್ಯ, ಸುರಕ್ಷತೆ ಹಾಗೂ ಆರೈಕೆ ಸೌಲಭ್ಯಗಳನ್ನು ಒದಗಿಸುವ ಕುರಿತು ಚರ್ಚಿಸಿದರು. ಪರಿಶೀಲನೆ ವೇಳೆ ಸಂಸ್ಥೆಗಳಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಸೌಲಭ್ಯಗಳು, ಆಹಾರ ವ್ಯವಸ್ಥೆ, ಆರೋಗ್ಯ ಸೇವೆಗಳು ಹಾಗೂ ರಕ್ಷಣಾ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಸತ್ಯ ನಾರಾಯಣ ಶೆಟ್ಟಿ ಅವರು ಮಕ್ಕಳ ಹಕ್ಕುಗಳ ಸಂರಕ್ಷಣೆ ಮತ್ತು ಸಮಗ್ರ ಅಭಿವೃದ್ಧಿಗೆ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶರಣಮ್ಮ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಂ.ಡಿ. ಗೋಕುಲ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಸುದರ್ಶನ, ಗಿಲ್ಲೇಸೂಗೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮನ್ಸೂರ್ ಅಹ್ಮದ್ ಸೇರಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ ಹಾಗೂ ವಿವಿಧ ಇಲಾಖೆಗಳ ಅಧೀಕ್ಷಕರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಮಕ್ಕಳ ಹಕ್ಕುಗಳ ರಕ್ಷಣೆ, ಅಪೌಷ್ಟಿಕತೆ ನಿರ್ಮೂಲನೆ ಹಾಗೂ ಸುರಕ್ಷಿತ ಬಾಲ್ಯ ನಿರ್ಮಾಣಕ್ಕೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಸತ್ಯ ನಾರಾಯಣ ಶೆಟ್ಟಿ ಅವರು ಕರೆ ನೀಡಿದರು.













