ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಸತ್ಯನಾರಾಯಣ ಶೆಟ್ಟಿ ಅವರು ಅಕ್ಟೋಬರ್ 26 ಮತ್ತು 27ರಂದು ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಿ ಮಕ್ಕಳ ಪಾಲನಾ ಸಂಸ್ಥೆಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಪರಿಶೀಲನೆ ನಡೆಸಲಿದ್ದಾರೆ. ಈ ಸಂಬಂಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ವತಿಯಿಂದ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದ್ದು, ಆಯೋಗದ ಸದಸ್ಯರ ಜಿಲ್ಲಾ ಪ್ರವಾಸದ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲು ಕೋರಲಾಗಿದೆ.

ಪತ್ರದಲ್ಲಿನ ಪ್ರವಾಸದ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 25ರಂದು ಮಧ್ಯಾಹ್ನ 2 ಗಂಟೆಗೆ ಸಿಂಧನೂರಿನಿಂದ ಚಿಕ್ಕಮಗಳೂರಿಗೆ ಪ್ರಯಾಣ ಬೆಳೆಸಲಿದ್ದು, ಅಂದು ವಾಸ್ತವ್ಯ ಹೂಡಲಿದ್ದಾರೆ. ಅಕ್ಟೋಬರ್ 26ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಚಿಕ್ಕಮಗಳೂರು ನಗರದಲ್ಲಿರುವ ಮಕ್ಕಳ ಪಾಲನಾ ಸಂಸ್ಥೆಗಳು, ವಸತಿ ನಿಲಯ, ಪೊಲೀಸ್ ಠಾಣೆ, ಅಂಗನವಾಡಿ, ಕೋಚಿಂಗ್ ಸೆಂಟರ್ ಹಾಗೂ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಇನ್ನು ಅಕ್ಟೋಬರ್ 27ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಜಿಲ್ಲೆಯಲ್ಲಿರುವ ಮಕ್ಕಳ ಪಾಲನಾ ಸಂಸ್ಥೆಗಳು, ವಸತಿ ನಿಲಯ, ಪೊಲೀಸ್ ಠಾಣೆ, ಅಂಗನವಾಡಿ, ಕೋಚಿಂಗ್ ಸೆಂಟರ್ ಹಾಗೂ ಜಿಲ್ಲಾಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ಸಂಸ್ಥೆಗಳಲ್ಲಿನ ವ್ಯವಸ್ಥೆಗಳ ಪರಿಶೀಲನೆಯ ದೃಷ್ಟಿಯಿಂದ ಈ ಪ್ರವಾಸ ಮಹತ್ವ ಪಡೆದಿದೆ. ಆಯೋಗದ ಸದಸ್ಯರ ಪ್ರವಾಸದ ವೇಳೆ ಅಗತ್ಯ ವಾಹನ ವ್ಯವಸ್ಥೆ ಸೇರಿದಂತೆ ಸ್ಥಳೀಯ ಪ್ರಯಾಣಕ್ಕೆ ಬೇಕಾದ ಸೌಲಭ್ಯಗಳನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಕೋರಲಾಗಿದೆ.












