ರಾಯಚೂರು,ಜು ೧೩ .ಮಹಿಳೆಯರಿಗೆ ಆಗುವ ಹಲವು ಸಮಸ್ಯೆಗಳ ಕುರಿತು ಸಮಾಲೋಚನೆ ಮತ್ತು ಅಗತ್ಯ ಸಹಾಯವನ್ನು ಮಾಡುವ ಹಾಗೂ ಕಾನೂನು ನೆರವು ನೀಡುವ ನಿಟ್ಟಿನಲ್ಲಿ ಸಾಂತ್ವಾನ ಕೇಂದ್ರಗಳ ಸಮಾಲೋಚಕರು ಮತ್ತು ಕಾರ್ಯಕರ್ತರು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಹೇಳಿದರು.
ಅವರು ಜು.೧೩ರ(ಗುರುವಾರ) ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಮ್ಮಿಕೊಂಡಿದ್ದ, ಜಿಲ್ಲಾ ಮಟ್ಟದ ಸಾಂತ್ವಾನ ಸಮಿತಿ ಸಭೆ, ವರದಕ್ಷಣೆ ಕಿರುಕಳ ಸಮಿತಿ ಸಭೆ ಹಾಗೂ ಸ್ತ್ರೀ ಶಕ್ತಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾಂತ್ವಾನ ಕೇಂದ್ರಗಳಲ್ಲಿ ಬರುವ ಪ್ರಕರಣಗಳ ಬಗ್ಗೆ ಅಂಕಿ ಅಂಶಗಳ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ತಯಾರಿಸಿಕೊಳ್ಳಬೇಕು ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸರಿಯಾದ ರೀತಿಯಲ್ಲಿ ಸಾಂತ್ವಾನ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದರು.
ಮಹಿಳೆಯರಿಗಾಗುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಪ್ರಕರಣಗಳನ್ನು ನಿಗದಿತ ಕಾಲಮಿತಿಯೊಳಗೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಮತ್ತು ಮಹಿಳೆಯರಿಂದ ಬರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ಇಚ್ಛಾಶಕ್ತಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಸ್ತ್ರೀ ಶಕ್ತಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವ ಬಗ್ಗೆ ಹೆಚ್ಚಿನ ಜಾಗೃತಿಯನ್ನು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಮತ್ತು ಉಳಿತಾಯಕ್ಕೆ ಹೆಚ್ಚಿನ ಒತ್ತು ನೀಡುವಂತೆ ಮಹಿಳೆಯರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಇದೇ ವೇಳೆ ಹಿರಿಯ ಶ್ರೇಣಿ ದಿವಾಣಿ ನ್ಯಾಯಾದೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಯಾನಂದ ಎಂ.ಬೇಲೂರೆ ಅವರು ಮಾತನಾಡಿ, ಸಾಂತ್ವಾನ ಕೇಂದ್ರಗಳಿಗೆ ಬರುವ ಮಹಿಳೆಯರ ದೂರುಗಳನ್ನು ಅಲ್ಲಿಯೇ ಬಗೆಹರಿಸಲು ಪ್ರಯತ್ನಿಸಬೇಕು ಒಂದು ವೇಳೆ ಸಾಂತ್ವಾನ ಕೇಂದ್ರಗಳಲ್ಲಿ ಬಗೆಹರಿಸಲಾಗದ ಪ್ರಕರಣಗಳನ್ನು ನ್ಯಾಯಾಲಯದ ಗಮನಕ್ಕೆ ತರಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಮಾತನಾಡಿ, ವರದಕ್ಷಣೆ ಕಿರುಕಳದ ದೂರುಗಳ ಬಂದಲ್ಲಿ ಸಾಂತ್ವಾನ ಕೇಂದ್ರಗಳು ಹಾಗೂ ಸಖಿ ಸ್ಟಾಪ್ ಒನ್ ಕೇಂದ್ರಗಳಲ್ಲಿ ಸಮಾಲೋಚನೆ ಮಾಡುವ ಮೂಲಕ ಬಗೆಹರಿಸಲು ಪ್ರಯತ್ನಿಸಬೇಕು. ಇದರಿಂದ ಶೇ.೫೦ರಷ್ಟು ಪ್ರಕರಣಗಳು ಸಮಾಲೋಚನೆಯಿಂದಲೇ ಬಗೆಹರಿಯುತ್ತವೆ ಬಗೆಹರಿಯದ ಪ್ರಕರಣಗಳನ್ನು ಪೊಲೀಸ್ ಠಾಣೆಗಳಿಗೆ ಕಳುಹಿಸಬೇಕು ಮತ್ತು ಪ್ರತಿ ತಿಂಗಳು ಪೊಲೀಸ್ ಠಾಣೆಯಿಂದ ಪ್ರಕರಣಗಳ ಕುರಿತು ಮಾಹಿತಿ ಪಡೆದುಕೊಳ್ಳಬೇಕು. ವರದಕ್ಷಣೆ ಕಿರುಕುಳಕ್ಕೆ ಒಳಗಾದ ಮಹಿಳೆಯ ಪ್ರಕರಣ ಇತ್ಯರ್ಥವಾದಲ್ಲಿ ಪ್ರತಿ ತಿಂಗಳು ಅವರಿಗೆ ಫೋನ್ ಕರೆ ಮಾಡುವ ಮೂಲಕ ಮಾಹಿತಿಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನಕುಮಾರ, ಪಶು ಸಂಗೋಪನಾ ಇಲಾಖೆಯ ಅಧಿಕಾರಿ ಅಶೋಕ, ಮಕ್ಕಳ ರಕ್ಷಣಾಧಿಕಾರಿ ಮನ್ಸೂರ್ ಅಹ್ಮದ್ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.